ಕಾವೇರಿಗಾಗಿ ನಾಳೆ ಮಂಡ್ಯ ಬಂದ್
1 min readಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಖಂಡಿಸಿ ರಾಜ್ಯದಲ್ಲಿ ಹೋರಾಟದ ಕಿಚ್ಚು ಭುಗಿಲೆದ್ದಿದ್ದು, ಮಂಡ್ಯ ನಗರದಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ಹೋರಾಟ ತೀವ್ರಗೊಳ್ಳುತ್ತಿದೆ. ನಾಳೆ ಮಂಡ್ಯ ನಗರವನ್ನು ಸಂಪೂರ್ಣವಾಗಿ ಬಂದ್ ಮಾಡಲು ಕನ್ನಡಪರ ಸಂಘಟನೆಗಳು ಹಾಗೂ ರೈತರು ಕರೆ ನೀಡಿದ್ದು, ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸಂಚಾರಕ್ಕೆ ತೊಡಕಾಗಲಿದೆ.
ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ವೇದಿಕೆ ಬಂದ್ ಗೆ ಕರೆ ನೀಡಿದ್ದು, ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಸಂಜಯ್ ವೃತ್ತ, ಮಹಾವೀರ ವೃತ್ತ, ವಿವಿ ರೋಡ್, ಡಬಲ್ ರೋಡ್ ಸೇರಿ ಹಲವು ರಸ್ತೆಗಳಲ್ಲಿ ಮೆರವಣಿಗೆ ನಡೆಯಲಿದ್ದು, ಮಂಡ್ಯ ನಗರದಾದ್ಯಂತ ಬೃಹತ್ ಬೈಕ್ ರ್ಯಾಲಿ ಆಯೋಜಿಸಲಾಗಿದೆ.
ಬಂದ್‌ಗೆ ಹೋಟೇಲ್ ಮಾಲೀಕರ ಹಾಗೂ ವರ್ತಕರ ಸಂಘದ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಹುತೇಕ ಎಲ್ಲ ಸಂಘ ಸಂಸ್ಥೆಗಳು ರೈತರ ಹೋರಾಟಕ್ಕೆ ಕೈ ಜೋಡಿಸುವ ಸಾಧ್ಯತೆಯಿದೆ.